ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ ನಡೆದಿದೆ.
ಈ ನಡುವೆ ಜಿಲ್ಲಾಡಳಿತ ಜಂಬೂ ಸವಾರಿ ಮಾರ್ಗವನ್ನ ಬದಲಾವಣೆ ಮಾಡಿದೆ. ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.
ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದ್ರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಪ್ಲಾನ್ ಮಾಡಲಾಗಿದೆ. ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನಯನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿಯಲ್ಲಿ ಅಲಂಕಾರ ಭೂಷಿತಳಾದ ತಾಯಿ ಚಾಮುಂಡಿ ದರ್ಶನ ಕೊಡಲಿದ್ದಾಳೆ.
ಇನ್ನೂ ಕೋವಿಡ್ ಸಮಯ ಹೊರತುಪಡಿಸಿ ಉಳಿದೆಲ್ಲ ವರ್ಷ ಜಂಬೂ ಸವಾರಿಗೆ ಅರಮನೆ ಆವರಣದಲ್ಲಿ 25 ರಿಂದ 30 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿತ್ತು. ಆದ್ರೆ ಈ ಬಾರಿ 10 -15 ಸಾವಿರ ಹೆಚ್ಚುವರಿ ಆಸನಗಳ ವ್ಯವಸ್ಥೆಗೆ ಜಿಲ್ಲಾಡಳಿತ ಪ್ಲ್ಯಾನ್ ಮಾಡಿದೆ. ಹಾಗಾಗಿ 40 ಸಾವಿರ ಆಸನಗಳ ವ್ಯವಸ್ಥೆಗೆ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.