ಉತ್ತರ ಪ್ರದೇಶದ ಝಾನ್ಸಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಈಗ ತಾನೆ ಪ್ರಪಂಚ ನೋಡಲು ಕಣ್ಣು ಬಿಟ್ಟಿದ್ದ ಬಡವರ ಮಕ್ಕಳು ಬೆಂಕಿ ಅನಾಹುತಕ್ಕೆ ಕಣ್ಮುಚ್ಚಿವೆ. ಸದ್ಯದ ಮಾಹಿತಿ ಪ್ರಕಾರ ಕಂದಮ್ಮಗಳ ಸಾವಿನ ಸಂಖ್ಯೆ 10ಕ್ಕಿಂತ ಹೆಚ್ಚಾಗಿದ್ದು, 16 ಮಕ್ಕಳನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ. ಬೆಂಕಿಯಲ್ಲಿ ಸುಟ್ಟಿರುವ ಮಕ್ಕಳ ಚಿಕಿತ್ಸೆಗಾಗಿ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ.
ಝಾನ್ಸಿಯ ಮಹಾರಾಣಿ ಲಕ್ಷ್ಮಿಭಾಯಿ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅನಾಹುತದ ಬಳಿಕ ಆಸ್ಪತ್ರೆಯಲ್ಲಿದ್ದ ಮಕ್ಕಳನ್ನ ಬದುಕಿಸಲು ಹರಸಾಹಸ ಪಟ್ಟಿದ್ದಾರೆ. ಆಸ್ಪತ್ರೆಯ ಕಿರಿದಾದ ಜಾಗದಲ್ಲಿ 54 ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಬೆಂಕಿಯ ಕೆನ್ನಾಲಿಗೆಯಲ್ಲಿ ಪುಟ್ಟ, ಪುಟ್ಟ ಮಕ್ಕಳನ್ನು ಬದುಕಿಸಲು ಸಾಧ್ಯವಾಗಿಲ್ಲ.
ಝಾನ್ಸಿ ಆಸ್ಪತ್ರೆಯಲ್ಲಿ ಒಂದೊಂದು ದೃಶ್ಯವೂ ಕರುಣಾಜನಕವಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನವಂತೂ ಮುಗಿಲು ಮುಟ್ಟಿದೆ. ಬೆಂಕಿ ಅವಘಡದಲ್ಲಿ ಕುಲದೀಪ್ ಎಂಬ ವ್ಯಕ್ತಿ ಮೂವರು ಮಕ್ಕಳನ್ನ ರಕ್ಷಣೆ ಮಾಡಿದ್ದಾನೆ. ಆದರೆ ಕತ್ತಲೆಯ ಕಾರಣದಿಂದ ತನ್ನ ಸ್ವಂತ ಮಗು ರಕ್ಷಣೆಗೆ ವಿಫಲವಾಗಿ ಕಣ್ಣೀರಿಡುತ್ತಿದ್ದಾರೆ.
ಝಾನ್ಸಿಯ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆಕಸ್ಮಿಕ ಸಂಭವಿಸಿ ದೊಡ್ಡ ದುರಂತ ನಡೆದಿದೆ. ಆಸ್ಪತ್ರೆಯಲ್ಲಿ ಬೆಂಕಿ ನಂದಿಸುವ ಉಪಕರಣಗಳು ಸುಸ್ಥಿತಿಯಲ್ಲಿ ಇರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಹೃದಯ ವಿದ್ರಾವಕ ಘಟನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದ ಮಕ್ಕಳ ಪೋಷಕರಿಗೆ ಯುಪಿ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ, ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆ ಹಾಗೂ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ.