ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.25 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ.
ಎಸಿಪಿ ಚಂದನ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ಪೊಲೀಸರು ಗೋಪಾಲ್ ಜೋಶಿ ಅವರನ್ನು ಬಂಧಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು.
ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ ಬಳಿಕ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಅವರ ಮನೆಗೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರೆ ಸುನೀತಾ ಚೌಹ್ವಾಣ್ ಸಹ ಕೇಶ್ವಾಪುರ ಠಾಣೆ ಆಗಮಿಸಿದ್ದು ಅವರಿಂದ ಪೊಲೀಸರು ಹೇಳಿಕೆ ಪಡೆಯುತ್ತಿದ್ದಾರೆ.
ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪೊಲೀಸರು ಆರೋಪಿಗಳನ್ನು ಬೆಂಗಳೂರಿಗೆ ಕರೆತರಲು ಸಿದ್ಧತೆ ನಡೆಸುತ್ತಿದ್ದಾರೆ.
ಯಾವುದೇ ಸಂಬಂಧ ಇಲ್ಲ:
ಗೋಪಾಲ್ ಜೋಶಿ ನನ್ನ ಸಹೋದರ ಅದರಲ್ಲಿ ಯಾವುದೇ ಅನುಮಾನವಿಲ್ಲ. ಈಗ ಅವರಿಗೂ ನನಗೂ ಯಾವುದೇ ಕೌಟುಂಬಿಕ ಹಾಗೂ ಹಣಕಾಸಿಕ ಸಂಬಂಧ ಇಲ್ಲ ಎಂದು ಪ್ರಹ್ಲಾದ್ ಜೋಶಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.
ನನ್ನ ಹಿರಿಯ ಸಹೋದರ ಗೋಪಾಲ್ ಜೋಶಿ ಅವರು ನಾನು ಬೇರೆಯಾಗಿ 33 ವರ್ಷಗಳು ಕಳೆದಿವೆ. ಈ ಹಿಂದೆಯೂ ಅವರ ವಿರುದ್ಧ ಎರಡು ಸಲ ಆರೋಪ ಕೇಳಿ ಬಂದಿತ್ತು. ಅದಕ್ಕಾಗಿ ನಾನು ಹಿಂದೆಯೇ ಗೋಪಾಲ್ ಜೋಶಿ ಅವರೊಂದಿಗೆ ನನ್ನ ಹೆಸರು ಲಿಂಕ್ ಮಾಡಬಾರದು ಎಂದು ಕೋರ್ಟ್‌ನಿಂದ ಆದೇಶ ತಂದಿದ್ದೇನೆ. ಸಾಮಾಜಿಕವಾಗಿ ಆರ್ಥಿಕವಾಗಿ ಯಾವುದೇ ಸಂಬಂಧ ಇಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.